ಕೋವಿಡ್-19 ಮುಂಜಾಗ್ರತಾ ಕ್ರಮ ಪರಿಣಾಮಕಾರಿಯಾಗಿ ಮುಂದುವರೆಯಲಿ : ಲೋಕಸಭಾ ಸದಸ್ಯ ವಿ. ಶ್ರೀನಿವಾಸಪ್ರಸಾದ್ಚಾಮರಾಜನಗರ, :- ಕೋವಿಡ್-19 ವೈರಾಣು ಹರಡದಂತೆ ಜಿಲ್ಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರೆಸುವ ಮೂಲಕ ಜನರ ಆರೋಗ್ಯ ಕಾಪಾಡಲು ಅಧಿಕಾರಿಗಳು ಮುಂದಾಗುವಂತೆ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್-19 ತಡೆಗಾಗಿ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಪರಾಮರ್ಶೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಕೋವಿಡ್-19 ವೈರಸ್ ತಡೆಯುವುದು ಪ್ರಮುಖ ಆದ್ಯತೆಯಾಗಿದೆ. ಕೋವಿಡ್-19 ವ್ಯಾಪಿಸದಂತೆ ಅತ್ಯಂತ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಿದೆ. ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ, ವೈಯಕ್ತಿಕ ಶುಚಿತ್ವ ಮತ್ತಿತರ ಪರಿಣಾಮಕಾರಿ ವಿಧಾನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ಆಗಬೇಕಿದೆ ಎಂದರು.

ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಮುಂದುವರೆಸಬೇಕು. ಆರೋಗ್ಯ ಪೂರಕ ಕಾರ್ಯಕ್ರಮಗಳು ಜನರ ಆರೋಗ್ಯ ಹಿತದೃಷ್ಠಿಯಿಂದ ನಡೆಸಿಕೊಂಡು ಹೋಗಬೇಕು. ಎಲ್ಲಾ ಭಾಗಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವ ಅರಿವು ಉಂಟುಮಾಡಬೇಕು. ಎಂದು ಲೋಕಸಭಾ ಸದಸ್ಯರು ತಿಳಿಸಿದರು.

ಕೋವಿಡ್ ಆಸ್ಪತ್ರೆ ಸ್ಥಾಪನೆ, ಫೀವರ್ ಕ್ಲಿನಿಕ್‍ಗಳ ಕಾರ್ಯ, ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಆರಂಭಿಸಲಾಗಿರುವ ಪಿ.ಸಿ.ಆರ್. ಪ್ರಯೋಗಾಲಯ ಕಾರ್ಯವೈಖರಿಯನ್ನು ಪರಿಶೀಲಿಸಿದ ಲೋಕಸಭಾ ಸದಸ್ಯರು ಸುಸಜ್ಜಿತ ವ್ಯವಸ್ಥೆಗಳು, ಸೌಲಭ್ಯಗಳು ಜಿಲ್ಲೆಯಲ್ಲಿಯೇ ಸಿಗಬೇಕೆಂಬ ಉದ್ದೇಶದಿಂದ ಸರ್ಕಾರ ಹೆಚ್ಚು ಗಮನ ನೀಡಿದೆ ಎಂದರು.

ಜಿಲ್ಲೆಯಲ್ಲಿ ವಲಸೆ ಕಾರ್ಮಿಕರು ಹಾಗೂ ಹೊರರಾಜ್ಯದಿಂದ ಜಿಲ್ಲೆಗೆ ಆಗಮಿಸಿರುವ ಇಲ್ಲಿನ ಕಾರ್ಮಿಕರ ಬಗ್ಗೆ ವಹಿಸಲಾಗಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದ ವೇಳೆ ಕಾರ್ಮಿಕರ ಹಿತ ಕಾಯುವ ವಿಷಯಗಳಿಗೆ ಆದ್ಯತೆ ನೀಡುವಂತೆ ತಿಳಿಸಿದರು.

ನಗರಸಭೆ ವ್ಯಾಪ್ತಿಯಲ್ಲಿ ಇರುವ ಆಟೋ, ಟ್ಯಾಕ್ಸಿ ಚಾಲಕರಿಗೆ ಆಹಾರ, ದಿನಸಿ ಪದಾರ್ಥಗಳ ಕಿಟ್ ಅನ್ನು ನೀಡಲು ನಿರ್ಧರಿಸಲಾಗಿದೆ. ಹೀಗಾಗಿ ಚಾಲಕರ ಪಟ್ಟಿಯನ್ನು ಅಧಿಕಾರಿಗಳು ಸಲ್ಲಿಸುವಂತೆ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸಪ್ರಸಾದ್ ಅವರು ಸೂಚಿಸಿದರು.

ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಮಾತನಾಡಿ ಜಿಲ್ಲೆಯಲ್ಲಿ ಕೊವಿಡ್ ತಡೆಗೆ ಆರಂಭದಿಂದಲು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುತ್ತಾ ಬಂದಿದ್ದೇವೆ. ಸಾಂಸ್ಥಿಕ ಕ್ವಾರೆಂಟೈನ್, ಚೆಕ್‍ಪೋಸ್ಟ್‍ಗಳಲ್ಲಿ ಬಿಗಿ ಕಣ್ಗಾವಲು, ಆರೋಗ್ಯ ಸಮೀಕ್ಷೆ ಸೇರಿದಂತೆ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸರ್ಕಾರದ ನಿರ್ದೇಶನ ಹಾಗೂ ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿದೆ. ಲಾಕ್‍ಡೌನ್ ಅವಧಿಯಲ್ಲಿ ಜನರ ಅಗತ್ಯತೆಗಳಿಗೆ ಸ್ಪಂದಿಸಲಾಗುತ್ತಿದೆ. ಜನರು ಸಹ ಜಿಲ್ಲಾಡಳಿತ ಕೈಗೊಂಡಿರುವ ಎಲ್ಲಾ ಕ್ರಮಗಳಿಗೆ ಪೂರಕವಾಗಿ ಸಹಕಾರ ನೀಡುತ್ತಿದ್ದಾರೆ ಎಂದರು.

ಶಾಸಕರಾದ ಎನ್. ಮಹೇಶ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕೆ.ಎಸ್. ಮಹೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಬೋಯರ್ ನಾರಾಯಣರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್, ಉಪವಿಭಾಗಾಧಿಕಾರಿ ನಿಖಿತಾ ಎಂ. ಚಿನ್ನಸ್ವಾಮಿ, ಜಿಲ್ಲಾ ಅರೋಗ್ಯಾಧಿಕಾರಿ ಡಾ. ಎಂ.ಸಿ. ರವಿ, ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಜಿಲ್ಲಾ ಆಸ್ಪತ್ರೆಯ ಡೀನ್ ಡಾ. ಸಂಜೀವ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Comments