ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಡಾ. ಹರೀಶಕುಮಾರ. ಕೆ.
Friday, August 14, 2020
ಕಾರವಾರ : ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಮನೆ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಆವರಣದಲ್ಲಿ ಜಿಲ್ಲೆಯ ಎಲ್ಲಾ ಎಸಿ, ತಹಶೀಲ್ದಾರ ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿ, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಹಾಗೂ ಮೆರವಣಿಗೆ ಮಾಡುವುದನ್ನು ನಿಷೇಧಿಸಲಾಗಿದ್ದು, ಮನೆ ಮತ್ತು ದೇವಸ್ಥಾನಗಳಲ್ಲಿ ಮಾತ್ರ ಪ್ರತಿಷ್ಠಾಪಿಸಲು ಅವಕಾಶವಿರುತ್ತದೆ. ಗಣೇಶ ಚತುರ್ಥಿ ಹಬ್ಬವನ್ನು ಗುಂಪಾಗಿ ಸೇರದೇ ಭಕ್ತಿಪೂರ್ವಕವಾಗಿ ಆಚರಿಸುವಂತೆ ಜನರಲ್ಲಿ ಜಾಗೃತೆ ಮೂಡಿಸಬೇಕೆಂದು ಅಧಿಕಾರಿಗಳಿಗೆ ಅವರು ಸೂಚಿಸಿದರು.
ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೆರೆ, ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡುವಂತಿಲ್ಲ, ಮನೆಯಲ್ಲೇ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ಅವರ ಮನೆ ಆವರಣದಲ್ಲಿಯೇ ವಿಸರ್ಜನೆ ಮಾಡಬೇಕು ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕು ಅಲ್ಲದೇ ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲೀಸ್, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆಗಳು ಹೊರಡಿಸಲಾದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ಅಪರ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ, ಎಸಿ ಪ್ರಿಯಾಂಗಾ ಎಂ, ತಹಶೀಲ್ದಾರ ಆರ್.ವಿ.ಕಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.