ನ.17 ರಿಂದ ಪದವಿ, ಸ್ನಾತಕೋತ್ತರ ಪದವಿಗಳು ಆರಂಭ- ತರಗತಿಗಳಿಗೆ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಾಗಬೇಕಾಗಿಲ್ಲ: ಅಪರ ಜಿಲ್ಲಾಧಿಕಾರಿ ಎಂ. ಜೆ ರೂಪ
ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳು ನವೆಂಬರ್ 17 ರಿಂದ ಆರಂಭಗೊಳ್ಳಲಿದ್ದು , ತರಗತಿಗಳಿಗೆ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಾಗಬೇಕಾಗಿಲ್ಲ. ಎಂದು ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಂ. ಜೆ ರೂಪ ತಿಳಿಸಿದರು.
ಅವರು ಶುಕ್ರವಾರ ದ.ಕ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ವಿಶ್ವವಿದ್ಯಾನಿಲಯ, ಖಾಸಗಿ ವಿಶ್ವವಿದ್ಯಾನಿಲಯ, ಸರ್ಕಾರಿ, ತಾಂತ್ರಿಕ, ಡಿಪ್ಲೋಮಾ, ಅನುದಾನ, ಅನುದಾನ ರಹಿತ ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಪ್ರಾಮಾಣಿತ ವಿಧಾನ- ಮಾರ್ಗಸೂಚಿಯ ಕುರಿತ ಸಭೆಯಲ್ಲಿ ಮಾತನಾಡಿದರು.ತರಗತಿಗಳಿಗೆ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಾಗಬೇಕಾಗಿಲ್ಲ. ಹಾಜರಾಗಲು ಇಚ್ಛಿಸದ ವಿದ್ಯಾರ್ಥಿಗಳು ಆನ್‍ಲೈನ್ ತರಗತಿಗಳಲ್ಲಿ ಪಾಲ್ಗೊಳ್ಳಬಹುದಾಗಿದೆ. ಆನ್‍ಲೈನ್ ತರಗತಿಗಳಿಗೆ ಹಾಜರಾಗಲು ಬಯಸುವ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಬಗ್ಗೆ ಇರುವ ಅನುಮಾನ ಅಥವಾ ಸಮಸ್ಯೆಗಳನ್ನು ಬಗೆಹರಿಸಿ ಪ್ರತಿ ದಿನ ಆನ್‍ಲೈನ್ ತರಗತಿಗಳನ್ನು ನಡೆಸಬೇಕು,ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳನ್ನು ನವೆಂಬರ್ 17 ರಿಂದ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ಪ್ರಾರಂಭಿಸಬೇಕೆಂದರು.
ಪ್ರತೀ ದಿನ ಕಾಲೇಜು ಪ್ರವೇಶಕ್ಕೆ ವಿದ್ಯಾರ್ಥಿಗಳು ಹಾಜರಾಗಲು ವಿದ್ಯಾರ್ಥಿಗಳ ಗುಂಪನ್ನು ವಿಂಗಡಣೆ ಮಾಡಿ ದಿನ ನಿತ್ಯ 50% ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಮಾಡಿಕೊಡಬೇಕು ಹಾಗೂ ಉಳಿದ ಪ್ರಥಮ, ದ್ವಿತೀಯ, ಪದವಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳನ್ನು ನಡೆಸಬೇಕು ಎಂದರು.