ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ!
ಬೆಂಗಳೂರು:. ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೇ ಪ್ರಥಮ ಪಿಯು ಅಂಕಗಳ ಆಧಾರದ ಮೇಲೆ ಉತ್ತೀರ್ಣ ಮಾಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬೆಂಗಳೂರಿನ ಜ್ಞಾನಮಂದಿರ ಟ್ರಸ್ಟ್ನ ಸಿಂಗ್ರೇಗೌಡ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿ ಬಿ.ವಿ ನಾಗರತ್ನ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರು, ಪದವಿಪೂರ್ವ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ರಸಾದ್ ಅವರು ಸಿದ್ಧಪಡಿಸಿದ್ದ ಮೆಮೋ ಅನ್ನು ಪೀಠಕ್ಕೆ ಸಲ್ಲಿಸಿದರು. ಪ್ರಸಕ್ತ ಸಾಲಿನ 5.92 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳು ಹಾಗೂ 76 ಸಾವಿರ ಪುನರಾವರ್ತಿತ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ವಿಚಾರವಾಗಿ ಸೂಕ್ತ ತೀರ್ಮಾನ ಕೈಗೊಳ್ಳುವ ಬಗ್ಗೆ 12 ಮಂದಿ ತಜ್ಞರ ಸಮಿತಿ ರಚಿಸಲಾಗಿದೆ. ತಜ್ಞರ ಸಮಿತಿ 15 ದಿನಗಳಲ್ಲಿ ವರದಿ ನೀಡಲಿದ್ದು, ಆ ವರದಿ ಆಧರಿಸಿ ಸರ್ಕಾರ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡುವ ಕುರಿತು ತೀರ್ಮಾನಿಸಲಿದೆ ಎಂದು ವಿವರಿಸಿದರು.