15 ವರ್ಷ ವಯಸ್ಸು ಮೇಲ್ಪಟ್ಟ ಪತ್ನಿಯೊಂದಿಗಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ: ಅಲಹಾಬಾದ್ ಹೈಕೋರ್ಟ್
Friday, August 6, 2021
ಪ್ರಯಾಗರಾಜ್ (ಉತ್ತರ ಪ್ರದೇಶ): 15 ವರ್ಷ ಅಥವಾ ಅದಕ್ಕಿಂತ ಹೆಚ್ಚು ವಯಸ್ಸಿನ ಪತ್ನಿಯಿದ್ದರೆ ಆಕೆಯ ಜತೆ ಲೈಂಗಿಕ ಕ್ರಿಯೆ ನಡೆಸಿದರೆ ಅದು ಅತ್ಯಾಚಾರ ಆಗುವುದಿಲ್ಲ ಎಂದು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ಹೇಳಿದೆ.
ಮೊರದಾಬಾದ್ನ ಖುಷಾಬೆ ಅಲಿ ಎಂಬಾತ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಕೋರ್ಟ್ ಈ ತೀರ್ಪು ನೀಡಿದೆ. ಅಪ್ರಾಪ್ತ ಪತ್ನಿಗೆ ವರದಕ್ಷಿಣೆ ಕಿರುಕುಳ ಮತ್ತು ನೈಸರ್ಗಿಕವಲ್ಲದ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಆರೋಪದಲ್ಲಿ ಈತನ ವಿರುದ್ಧ ಈ ದೂರು ದಾಖಲಾಗಿತ್ತು.
ಆತ ಜಾಮೀನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದ. ಅಲಿಗೆ ಜಾಮೀನು ನೀಡಿರುವ ನ್ಯಾಯಮೂರ್ತಿ ಮೊಹಮ್ಮದ್ ಅಸ್ಲಾಂ ಈ ತೀರ್ಪು ನೀಡಿದ್ದಾರೆ. ಭಾರತೀಯ ದಂಡ ಸಂಹಿತೆಯ 375ನೇ ಸೆಕ್ಷನ್ ಉಲ್ಲೇಖಿಸಿರುವ ನ್ಯಾಯಮೂರ್ತಿಗಳು, ಒಬ್ಬ ವ್ಯಕ್ತಿ ತನ್ನ ಪತ್ನಿ 15 ವರ್ಷ ಅಥವಾ 15 ವರ್ಷಕ್ಕಿಂತ ಮೇಲ್ಪಟ್ಟವಳಾಗಿದ್ದರೆ, ಆಕೆಯ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಿಕೊಳ್ಳುವುದು ಅತ್ಯಾಚಾರವಲ್ಲ ಎಂದು ಹೇಳಿದ್ದಾರೆ. ಮಹಿಳೆಯರೊಂದಿಗೆ ಒಪ್ಪಿತವಲ್ಲದ ಲೈಂಗಿಕ ಕ್ರಿಯೆಯನ್ನು ಅತ್ಯಾಚಾರ ಎಂದು ಪರಿಗಣಿಸುತ್ತದೆ. ಅಪರಾಧ ಕಾನೂನುಗಳ ತಿದ್ದುಪಡಿ ಕಾಯ್ದೆಯನ್ನು 2013ರ ಜಾರಿಗೆ ತಂದಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 375ಕ್ಕೆ ಕೆಲವೊಂದು ತಿದ್ದುಪಡಿ ಮಾಡಲಾಗಿದೆ. ಅದರಲ್ಲಿ 18 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ಮಹಿಳೆಯೊಂದಿಗೆ ಒಪ್ಪಿತವಲ್ಲದ ಲೈಂಗಿಕ ಕ್ರಿಯೆ ನಡೆಸಿದರೆ ಅದನ್ನು ಅತ್ಯಾಚಾರ ಎಂದು ಪರಿಗಣಿಸಲಾಗಿದೆ.