ವಿದ್ಯಾರ್ಥಿನಿಯರ ಮೇಲೆ ಸಾಮೂಹಿಕ ಅತ್ಯಾಚಾರ..9 ಮಂದಿ ಶಿಕ್ಷಕರು ಮತ್ತು ಪ್ರಾಂಶುಪಾಲನ ವಿರುದ್ಧ ದೂರು ದಾಖಲು...!
Thursday, December 9, 2021
ಅಲ್ವಾರ್ (ರಾಜಸ್ಥಾನ): ನಾಲ್ವರು ವಿದ್ಯಾರ್ಥಿನಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ 9 ಮಂದಿ ಶಿಕ್ಷಕರು ಮತ್ತು ಪ್ರಾಂಶುಪಾಲನ ವಿರುದ್ಧ ಪ್ರಕರಣ ದಾಖಲಿಸಲಾಗಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಬಾಲಕಿ 10ನೇ ತರಗತಿಯಲ್ಲಿ ಓದುತ್ತಿದ್ದು, ಕಳೆದ ಒಂದು ವರ್ಷದಿಂದ ಆಕೆಯ ಮೇಲೆ ಪ್ರಾಂಶುಪಾಲರು ಹಾಗು ಶಿಕ್ಷಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಜತೆಗೆ ಇಬ್ಬರು ಶಿಕ್ಷಕಿಯರು ಈ ದುಷ್ಕೃತ್ಯದ ವಿಡಿಯೋಗಳನ್ನು ಚಿತ್ರೀಕರಿಸಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ.
ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕರು ಹಾಗು ಪ್ರಾಂಶುಪಾಲರು ವಿದ್ಯಾರ್ಥಿನಿಯರನ್ನು ಕರೆದು ಅಸಭ್ಯವಾಗಿ ವರ್ತಿಸುತ್ತಿದ್ದರು ಎಂದು ಆರೋಪಿಸಿ ಬಾಲಕಿಯರ ಕುಟುಂಬಸ್ಥರು ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಿದ ಸಂದರ್ಭದಲ್ಲಿ ಇನ್ನೂ ಮೂವರು ವಿದ್ಯಾರ್ಥಿನಿಯರು ಅತ್ಯಾಚಾರಕ್ಕೆ ಒಳಗಾಗಿರುವುದು ತಿಳಿದು ಬಂದಿದೆ. ಇವರು 6ನೇ ತರಗತಿ, 4ನೇ ತರಗತಿ ಮತ್ತು 3ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಾಗಿದ್ದಾರೆ. ಈ ಘಟನೆ ಕುರಿತು ಯಾರಿಗಾದರೂ ಮಾಹಿತಿ ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಸಂತ್ರಸ್ತ ಬಾಲಕಿಯರು ತಿಳಿಸಿದ್ದಾರೆ.
ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಾಂಶುಪಾಲರು ಹಾಗು ಶಿಕ್ಷಕರು ಅಂತಹ ಯಾವುದೇ ಘಟನೆ ನಡೆದಿಲ್ಲ. ಅನಗತ್ಯವಾಗಿ ನಮ್ಮ ಮಾನಹಾನಿ ಮಾಡಲಾಗುತ್ತಿದೆ ಎಂದಿದ್ದಾರೆ. ಪೊಲೀಸ್ ತನಿಖೆಯಲ್ಲಿ ಎಲ್ಲವೂ ಹೊರಬರಲಿದೆ ಎಂದು ತಿಳಿಸಿದ್ದಾರೆ.