ತೋಟದೊಳಗೆ ಹುಲಿ ದಾಳಿಗೆ ಯುವಕ ಬಲಿ: ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ
Tuesday, March 29, 2022
ಕೊಡಗು: ತೋಟದೊಳೆಗೆ ಬಂದಿರುವ ಹುಲಿಯೊಂದು ಯುವಕನ ಮೇಲೆರಗಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ನಡೆದಿದೆ. ಈ ಬಗ್ಗೆ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಆತನ ಮೃತದೇಹವನ್ನು ಅಲ್ಲಿಯೇ ಇಟ್ಟುಕೊಂಡು ಪ್ರತಿಭಟನೆ ನಡೆಸಿದ್ದಾರೆ.
ವಿರಾಜಪೇಟೆ ತಾಲೂಕಿನ ರುದ್ರಗುಪ್ಪೆ ಗ್ರಾಮದ ತೋಟದಲ್ಲಿ ಕಾಳುಮೆಣಸು ಕೊಯ್ಲು ನಡೆಸುತ್ತಿದ್ದ ಸಂದರ್ಭದಲ್ಲಿ ಹುಲಿಯೊಂದು ದಾಳಿ ನಡೆಸಿದೆ. ಈ ಸಂದರ್ಭ ಕಾಳುಮೆಣಸು ಕೊಯ್ಲು ನಡೆಸುತ್ತಿದ್ದ ಕಾರ್ಮಿಕ ಗಣೇಶ್(30) ಮೃತಪಟ್ಟಿದ್ದಾರೆ. ಇದೇ ಪ್ರದೇಶದಲ್ಲಿ ಕಳೆದ ವರ್ಷ ಮೂವರು ಹುಲಿಯ ದಾಳಿಗೆ ಬಲಿಯಾಗಿದ್ದಾರೆ. ಈ ಬಾರಿ ಗಣೇಶ್ ಸಾವಿಗೀಡಾದ್ದರಿಂದ ರೊಚ್ಚಿಗೆದ್ದ ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಯುವಕನ ಮೃತದೇಹವನ್ನು ಸ್ಥಳದಲ್ಲೇ ಇರಿಸಿ ಪ್ರತಿಭಟನೆ ನಡೆಸಿ, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿದ್ದಾರೆ. ಎಸ್ಪಿ ಅಯ್ಯಪ್ಪ ಸ್ಥಳಕ್ಕೆ ಭೇಟಿ ನೀಡಿದ್ದು, ಪೊಲೀಸ್ ಭದ್ರತೆ ಒದಗಿಸಲಾಗಿದೆ. ಅರಣ್ಯ ಅಧಿಕಾರಿಗಳು ಹುಲಿಯನ್ನು ಹಿಡಿಯಬೇಕು. ಜೊತೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.