ಮದುವೆಯ ಭರವಸೆ ನೀಡಿ ಮಹಿಳೆಯ ಸಹಮತದೊಂದಿಗೆ ದೈಹಿಕ ಸಂಬಂಧ ಬೆಳೆಸಬಹುದು. ಆದರೆ....
Thursday, April 7, 2022
ಕೊಚ್ಚಿ: ವಿವಾಹವಾಗುವ ನೈಜ ಭರವಸೆಯೊಂದಿಗೆ, ಮಹಿಳೆಯ ಸಮ್ಮತಿ ಮೇರೆಗೆ ಆಕೆಯೊಂದಿಗೆ ದೈಹಿಕ ಸಂಬಂಧ ಹೊಂದುವುದನ್ನು ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಆದರೆ, ಮದುವೆಯಾಗುವುದಾಗಿ ಸುಳ್ಳು ಭರವಸೆ ಮೂಲಕ ದೈಹಿಕ ಸಂಬಂಧ ಬೆಳೆಸಿದರೆ ಅದನ್ನು ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಬಹುದು ಎಂದು ಹೈಕೋರ್ಟ್ ಪ್ರಕರಣವೊಂದರ ತೀರ್ಪಿನಲ್ಲಿ ಉಲ್ಲೇಖಿಸಿದೆ.
ಪ್ರಕರಣವೇನು? ವ್ಯಕ್ತಿಯೊಬ್ಬ ತನ್ನ ಸಂಬಂಧಿ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ನೀಡಿದ್ದ ಎಂದು ದೂರು ದಾಖಲಾಗಿತ್ತು. ಆರೋಪಿಯು ಸುಳ್ಳು ಭರವಸೆ ನೀಡಿ ಮೂರು ದಿನಗಳ ಕಾಲ ಮಹಿಳೆ ಜೊತೆ ಲೈಂಗಿಕ ಸಂಪರ್ಕ ಹೊಂದಿದ್ದ. ಬಳಿಕ ಬೇರೊಂದು ಮಹಿಳೆಯ ಜೊತೆ ವಿವಾಹವಾಗಿದ್ದಾನೆ ಎಂದು ಮಹಿಳೆಯ ಪರ ಪ್ರಾಸಿಕ್ಯೂಷನ್ ವಾದ ಮಾಡಿತ್ತು. ಪ್ರಕರಣದ ವಿಚಾರಣೆ ನಡೆಸಿದ ವಿಚಾರಣಾಧೀನ ನ್ಯಾಯಾಲಯ ಆರೋಪಿಗೆ ಶಿಕ್ಷೆ ಘೋಷಿಸಿ, ದಂಡವನ್ನೂ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯು ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದನು.
ಈ ಹಿನ್ನೆಲೆಯಲ್ಲಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯು ಉದ್ದೇಶಪೂರ್ವಕವಾಗಿ ಮಹಿಳೆಯನ್ನು ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿದ್ದಾನೆ ಎಂಬುದಕ್ಕೆ ಯಾವುದೇ ಸೂಕ್ತ ಸಾಕ್ಷಿ ಇಲ್ಲದ ಕಾರಣ, ಆರೋಪಿಗೆ ವಿಧಿಸಲಾಗಿದ್ದ ಶಿಕ್ಷೆ ಮತ್ತು ದಂಡವನ್ನು ಹೈಕೋರ್ಟ್ ವಜಾಗೊಳಿಸಿದೆ.