ಖಾತೆ ಮಾಡಿಕೊಡಲು ಲಂಚ: ಗ್ರಾಮ ಪಂಚಾಯತ್ ಕಾರ್ಯದರ್ಶಿ ಅರೆಸ್ಟ್!
ಖಾತೆ ಮಾಡಿಕೊಡಲು ಲಂಚ: ಗ್ರಾಮ ಪಂಚಾಯತ್ ಕಾರ್ಯದರ್ಶಿ ಅರೆಸ್ಟ್!
ನಿವೇಶನದ ಖಾತೆ ಮಾಡಿಕೊಡಲು ನಾಗರಿಕರೊಬ್ಬರಿಂದ ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯತ್ ಕಾರ್ಯದರ್ಶಿಯೊಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಶಿವಮೊಗ್ಗದ ಅಬ್ಬಲಗೆರೆ ಗ್ರಾಮ ಪಂಚಾಯತ್ ಕಾರ್ಯದರ್ಶಿ ಯೋಗೇಶ್ ಎಂದು ಗುರುತಿಸಲಾಗಿದೆ.
ಶಿವಮೊಗ್ಗದ ಅಬ್ಬಲಗೆರೆ ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್-2 ಹುದ್ದೆಯಲ್ಲಿ ಆತ ಅಧಿಕಾರಿಯಾಗಿದ್ದ. ಯಶವಂತ ಎಂಬವರಿಂದ ಆತ ಲಂಚಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ತನ್ನ 10 ಗುಂಟೆ ಜಾಗವನ್ನು ತಮ್ಮ ತಂದೆಯ ಹೆಸರಿನಿಂದ ತಮ್ಮಹೆಸರಿಗೆ ಖಾತೆ ಮಾಡಿಕೊಡಲು 6 ತಿಂಗಳ ಹಿಂದೆ ಅಬ್ಬಲಗೆರೆ ಗ್ರಾಮ ಪಂಚಾಯತ್‌ಗೆ ಅರ್ಜಿ ಸಲ್ಲಿಸಿದ್ದರು.
ಪಂಚಾಯತ್ ಕಾರ್ಯದರ್ಶಿ ಯೋಗೇಶ್ ಅವರು ಯಶವಂತ ಅವರಿಗೆ ಖಾತೆ ಮಾಡಿಕೊಡಲು 15 ಸಾವಿರ ರೂಪಾಯಿ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಯಶವಂತ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಈ ಬಗ್ಗೆ ನಿಖರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದರು.